March 14, 2025

ಉಡುಪಿಯಲ್ಲಿ ದಲಿತ ಯುವಕನ ಮೇಲೆ ಪೊಲೀಸ್ ಹಲ್ಲೆ: ನ್ಯಾಯಕ್ಕಾಗಿ ಅನಿರ್ದಿಷ್ಟ ಪ್ರತಿಭಟನೆ..

Spread the love



ಉಡುಪಿಯಲ್ಲಿ ನಡೆದ ಅಮಾನವೀಯ ಘಟನೆಯ ವಿರುದ್ಧ ದಲಿತ ಸಂಘಟನೆಗಳು ಮತ್ತು ಸಾಮಾಜಿಕ ಹೋರಾಟಗಾರರು ಕಠಿಣ ನಿಲುವು ತೆಗೆದುಕೊಂಡಿದ್ದಾರೆ. 17 ದಿನಗಳ ಹಿಂದೆಯೇ ರಸ್ತೆಯಲ್ಲಿ ನಿಂತಿದ್ದ ಅಮಾಯಕ ದಲಿತ ಯುವಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಜನತೆಯಲ್ಲಿ ಆಕ್ರೋಶ ಉಂಟುಮಾಡಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.



ರಾಜ್ಯದಲ್ಲಿ ನ್ಯಾಯ ಮತ್ತು ಸಮಾನಕ್ಕಾಗಿ ಹೋರಾಡುವ ಭೀಮವಾದ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಟನೆ, ಲಾರಿ ಚಾಲಕರು ಮತ್ತು ಮಾಲಕರ ಸಂಘ ಸೇರಿ ಹಲವು ಸಂಘಟನೆಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿವೆ. ಸರ್ಕಾರ ಮತ್ತು ಜಿಲ್ಲಾಡಳಿತ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಅಸಮಾನತೆಯ ವಿರುದ್ಧ ಹಾಗೂ ಅಹಿತಕರ ನೀತಿಗಳನ್ನು ಖಂಡಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಉಡುಪಿಯಲ್ಲಿ ಅನಿರ್ದಿಷ್ಟ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ. ಜನಸಾಮಾನ್ಯರು, ದಲಿತ ಬಾಂಧವರು, ಸಾಮಾಜಿಕ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ, ತಿಳಿಸಿದ್ದಾರೆ ಪ್ರತಿಭಟನೆ ಶಾಂತಿಯುತವಾಗಿ ನಡೆಯಲಿದೆ.

ಪ್ರತಿಭಟನಾಕಾರರು, ಪೊಲೀಸರು ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ಇಲ್ಲವೇ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮತ್ತಷ್ಟು ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.